ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಮಂಡ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ ವೈದ್ಯಾಧಿಕಾರಿ ಮತ್ತು ಹಾಲಿ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಕೀಲು ಮೂಳೆ ತಜ್ಞ ಕಳೆದ 2 ವರ್ಷಗಳಿಂದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿದ್ದ ಅವಧಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಯುಷ್ಮಾನ್ ಯೋಜನೆಗಳ ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಮಂಡ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಹೆಚ್, ಜಿಲ್ಲಾ ಕುಟುಂಬ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್ ಎಂ.ಸಿ., ಡಿಹೆಚ್ಓ ಕಚೇರಿ ಅಧೀಕ್ಷಕ ಸುರೇಶ್ ಬಾಬು, ಪ್ರಥಮ ದರ್ಜೆ ಸಹಾಯಕರಾದ ಶಂಕರ್, ರವೀಶ್ ಹಾಗೂ ಜಿ.ಆರ್.ಸಿ.ಹೆಚ್.ಅಧಿಕಾರಿಗಳ ಕಚೇರಿಯ ಸೋಮಶೇಖರ್ ಅವರನ್ನೊಳಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಲಾಗಿದೆ.
ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಎಬಿಆರ್’ಕೆ ಮತ್ತು ಆರೋಗ್ಯ ರಕ್ಷಾ ನಿಧಿ ದುರ್ಬಳಕೆ ಮಾಡಿಕೊಂಡಿರುವ ಕುರಿತು ಕಳೆದ ನ.29ರಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಡಿಎಚ್ ಓ ಡಾ.ಮೋಹನ್ ಅಕ್ರಮಗಳ ತನಿಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದ್ದಾರೆ.