ಸುಮಲತಾ ತೀರ್ಮಾನಕ್ಕೆ ಎಚ್.ಡಿ.ಕುಮಾರಸ್ವಾಮಿ ಕೃತಜ್ಞತೆ
ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ಲೋಕಸಭಾ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಗೆ ಘೋಷಣೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬುಧವಾರ ಪಾಂಡವಪುರದ ಕ್ಯಾತನಹಳ್ಳಿ ಗ್ರಾಮದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರ ಸಮಾಧಿ, ಪುತ್ಥಳಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರ ನಡೆಗೆ ಸಂತಸ ವ್ಯಕ್ತಪಡಿಸಿದರು.
ಸುಮಲತಾ ಅವರು ತಮ್ಮ ಮತ್ತು ರಾಜ್ಯದ ಇತರ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವವಹಿಸಲಿದ್ದಾರೆ. ಬಿಜೆಪಿ ಸೇರ್ಪಡೆ ನಂತರ ಪ್ರಚಾರಕ್ಕೆ ಆಹ್ವಾನಿಸುತ್ತೇನೆ ಎಂದು ಅವರು ಹೇಳಿದರು.
ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು. ಆ ನಿಟ್ಟಿನಲ್ಲಿ ೪೦೦ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಎ.೪ರಂದು ಬೆಳಗ್ಗೆ ೧೧.೦೫ಕ್ಕೆ ನಾಮಪತ್ರಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ, ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಎಚ್.ಟಿ.ಮಂಜು, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಜಿಪಂ ಮಾಜಿ ಸದಸ್ಯ ವಿಜಯಾನಂದ, ಮೈಸೂರು ಮಾಜಿ ಮೇಯರ್ ರವಿಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಧನಂಜಯ್‌ರಿತರ ಮುಖಂಡರು ಉಪಸ್ಥಿತರಿದ್ದರು.
–
—