ನಾಗಮಂಗಲ ತಾಲ್ಲೂಕು ಆಸ್ಪತ್ರೆಗೆ ಉಪಲೋಕಾಯುಕ್ತರ ಭೇಟಿ: ಔಷಧ ದಾಸ್ತಾನು, ಸ್ವಚ್ಛತೆ ಹಾಗೂ ಸೇವೆಗಳ ಪರಿಶೀಲನೆ
ನಾಗಮಂಗಲ, ಸೆ.10: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ನಾಗಮಂಗಲ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಔಷಧಗಳ ದಾಸ್ತಾನು, ಸಂಗ್ರಹಣೆ, ವಿತರಣೆ ಹಾಗೂ ಅವಧಿ ಮೀರಿದ ಔಷಧಗಳ ಕುರಿತು ಪರಿಶೀಲನೆ ನಡೆಸಿದ ಅವರು, ಔಷಧಗಳ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೊರರೋಗಿಗಳ ವಿಭಾಗ (OPD) ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಚಿಕಿತ್ಸೆ ನೀಡುವ ವೈದ್ಯರ ಹೆಸರನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.ಒಳರೋಗಿಗಳಿಗೆ ನೀಡುವ ಆಹಾರದ ಗುಣಮಟ್ಟ ಪರೀಶೀಲಿಸಿದರು.
ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ₹2.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಬೇಕಿರುವ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಚಿಕಿತ್ಸೆ ಪಡೆಯುವ ಸಾರ್ವಜನಿಕರಿಗೆ ನೀಡುವ ಚೀಟಿಯಲ್ಲಿ ವೈದ್ಯರ ಹೆಸರು ಹಾಗೂ ಸೂಚಿಸಿರುವ ಔಷಧಗಳ ಹೆಸರನ್ನು ಸ್ಪಷ್ಟವಾಗಿ ನಮೂದಿಸಬೇಕು. ಮಾತ್ರೆಗಳನ್ನು ಸೂಕ್ತವಾಗಿ ಕವರ್ಗಳಲ್ಲಿ ಹಾಕಿ ನೀಡುವುದರ ಜೊತೆಗೆ, ಯಾವ ಔಷಧವನ್ನು ಎಷ್ಟು ಪ್ರಮಾಣದಲ್ಲಿ ಹಾಗೂ ಹೇಗೆ ಸೇವಿಸಬೇಕು ಎಂಬುದರ ಕುರಿತು ರೋಗಿಗಳಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ ಆಸ್ಪತ್ರೆಯ ಶವಾಗಾರ (ಮಾರ್ಚುರಿ) ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾರ್ವಜನಿಕರಿಗೆ ಆರೋಗ್ಯ ಸೇವೆ ಪಡೆಯುವಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ, ಔಷಧ ಪೂರೈಕೆ, ಸಂಗ್ರಹಣೆ.ಆಹಾರ ಪೂರೈಕೆ ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟದ ಬಗ್ಗೆ ನಿರಂತರ ನಿಗಾವಹಿಸಬೇಕು ಎಂದು ಉಪಲೋಕಾಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.


