ಮಂಡ್ಯ:ಜೂ೧೫. ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಚಳುವಳಿಯ ಸಂಸ್ಥಾಪಕ ಸ್ವಾಭಿಮಾನಿ ಮತ್ತು ಕ್ರಾಂತಿಕಾರಿ ನಾಯಕ ಪ್ರೊಫೆಸರ್ ಬಿ ಕೃಷ್ಣಪ್ಪರವರ 86ನೇ ಜನ್ಮದಿನೋತ್ಸವ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ದುರಾಡಳಿತ ವ್ಯವಸ್ಥೆಯನ್ನು ಖಂಡಿಸಿ ಜೂನ್ 18ರಂದು ಸಾಮಾಜಿಕ ನ್ಯಾಯಕ್ಕಾಗಿ ಸಂಘರ್ಷ ರಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಕೆಎಂ ಅನಿಲ್ ಕುಮಾರ್ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆ ನಡೆಸಿ ನಂತರ ಬಹಿರಂಗ ಸಭೆ
ಎಂದು ತಿಳಿಸಿದರು .
ಅಂದು ನಡೆಯುವ ಸಭೆಯಲ್ಲಿ ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಜಾತಿ ಜನ ಸಂಖ್ಯಾ ವಾರು ಮೀಸಲಾತಿ ಜಾರಿ ,ದೌರ್ಜನ್ಯ ,ಅತ್ಯಾಚಾರ ತಡೆಯಲು ಕಠಿಣ ಕ್ರಮ ,ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ಮಕ್ಕಳಿಗೆ ಸರ್ಕಾರದಿಂದ ಶುಲ್ಕ ಭರಿಸಲು ಆದೇಶ ,ದಲಿತ ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಹೊರಗುತ್ತಿಗೆ ಪದ್ಧತಿ ರದ್ದು ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು
ಅದೇ ರೀತಿ ಎಸ್ಸಿ ಎಸ್ಟಿ ಉಪಯೋಜನಾ ಕಾಯ್ದೆ ರೂಪಿಸಿ ಜನಸಂಖ್ಯೆಗೆ ಅನುಗುಣವಾಗಿ ಶೇಕಡ 30ರಷ್ಟು ಅನುದಾನ ಜಾರಿ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವುದು, ಮೀಸಲಾತಿ ಮಿತಿಯನ್ನು ವಾಪಸ್ ಪಡೆಯುವುದು ,ಕೇಂದ್ರ ಸರ್ಕಾರದ ಸೇವೆಯಲ್ಲಿ ಪರಿಶಿಷ್ಟ ಜಾತಿ ಪಂಗಡದ ಎರಡು ಲಕ್ಷ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಲಾಗುವುದು ಎಂದರು .
ಅಂದು ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟ ಗಿರಿಯಯ್ಯ ಉದ್ಘಾಟಿಸಲಿದ್ದು ವಿಚಾರವಾದಿ ಡಾಕ್ಟರ್ ತುಕಾರಾಂ ಅವರು ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜನಾರ್ಧನ ಬಾಬು,ರಂಗನಾಥ್,, ಮುನಿರಾಜ್, ನಾಗೇಶ್, ಭಾಗ್ಯಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸುರೇಶ್, ರಾಜು, ಆನಂದ್ ,ರಂಗಸ್ವಾಮಿ, ಮರಂಕಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು