*ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ ಡಾ. ಕುಮಾರ*
ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು, ದೂರು ಬಂದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಘನತ್ಯಾಜ್ಯ ವಸ್ತು ನಿರ್ವಹಣೆಗೆ ಅವಶ್ಯಕವಾದ ಮಾನವ ಸಂಪನ್ಮೂಲವನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ನೀಡುವ ಸಂಬಂಧ ಸಭೆ. ಹಾಗೂ ನಗರಸಭೆ ಪುರಸಭೆ ಪ್ರಗತಿ ಪರಿಶೀಲನಾ ಸಭೆಯನ್ನು ಕುರಿತು ಮಾತನಾಡಿದರು.
ಕುಡಿಯುವ ನೀರಿನಲ್ಲಿ ಯಾವುದೇ ಕಲುಷಿತ ನೀರು ಸೇರದಂತೆ ನೋಡಿಕೊಳ್ಳಿ. ನಿಯಮಿತವಾಗಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ ಎಂದರು.
ಮಳೆಗಾಲ ಪ್ರಾರಂಭವಾಗಿದ್ದು, ಒಳಚರಂಡಿಗಳಲ್ಲಿ ಯಾವುದೇ ಅಡೆತಡೆ ಇಲ್ಲದೇ ನೀರು ಹರಿಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಆಗಿಂದಾಗೆ ತಮ್ಮ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ಎಂದರು.
ಎಸ್.ಎಫ್.ಸಿ, ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ನಿಯಮಾನುಸಾರ ವೆಚ್ಚಮಾಡಿ ಒಂದು ವಾರದೊಳಗೆ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಹಣಕಾಸು ಮತ್ತು 15 ನೇ ಹಣಕಾಸು ಯೋಜನೆಯಡಿ ಕೈಗೊಳ್ಳ ಬಹುದಾದ ಅಗತ್ಯ ಕಾಮಗಾರಿಗಳ ಯೋಜನೆಯನ್ನು ಒಂದು ವಾರದೊಳಗೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದರು.
ಒಂದು ತಿಂಗಳೊಳಗಾಗಿ 15 ನೇ ಹಣಕಾಸು ಯೋಜನೆಯಡಿ ಟೆಂಡರ್ ಆಗಿರುವ ಕಾಮಗಾರಿಗಳು ಪ್ರಾರಂಭವಾಗಬೇಕು, ಪ್ರಗತಿಯಲ್ಲಿರುವ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದರು.
ಆಸ್ತಿ ತೆರಿಗೆ ಹಾಗೂ ಜಾಹೀರಾತು ತೆರಿಗೆ ಸಂಗ್ರಹಿಸುವ ಕೆಲಸಗಳು ಚುರುಕುಗೊಳ್ಳಬೇಕು. ಉದ್ದಿಮೆ ಪರವಾನಗಿ ಹಾಗೂ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದ ಅಂಗಡಿಗಳ ಬಾಡಿಗೆ ಸಂಗ್ರಹಿಸಲು ತಂಡಗಳನ್ನು ರಚಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ತುಷಾರಮಣಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ನಗರಸಭೆ ಆಯುಕ್ತರು ಆರ್ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.