ಪ್ರಜ್ವಲ್ ರೇವಣ್ಣನ ಕಾಮಕಾಂಡದ ಪೆನ್ ಡ್ರೈವ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ಜ್ಯಾದಳ ಪ್ರತಿಭಟನೆ
ಮಂಡ್ಯ.ಮೇ:೦೭.ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ಪೆನ್‌ಡ್ರೈವ್ ಪ್ರಕರಣವನ್ನು
ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ಕಿರುಕುಳ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಜೆಡಿಎಸ್ ವತಿಯಿಂದ ಮಂಗಳವಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್‌ನ ಮಾಜಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಧರಣಿ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸ್ವಲ್ಪ ಸಮಯ ಮಾತಿನ ಚಕಮಕಿ ನಡೆಯಿತು. ನಂತರ, ಎಲ್.ಆರ್.ಶಿವರಾಮೇಗೌಡರ ಪ್ರತಿಕೃತಿಯನ್ನು ದಹನ ಮಾಡಿದರು.
ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡುವ ಮೂಲಕ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಮಹಿಳೆಯರ ಮಾನಹಾನಿ ಮಾಡಿದ್ದಾರೆ. ಜತೆಗೆ ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದರು.
ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದ್ದು, ತಂಡದ ಮೇಲೆ ಕಾಂಗ್ರೆಸ್ ಸರಕಾರ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಮೂಲಕ ಸತ್ಯಾಂಶ ಹೊರತಂದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಕೆ.ಸುರೇಶಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷೆ ಅಂಬುಜಮ್ಮ, ಅಮರಾವತಿ ಚಂದ್ರಶೇಖರ್ ಸೇರಿದಂತೆ ನೂರಾರು ಮಂದಿ ಧರಣಿಯಲ್ಲಿ ಭಾಗವಹಿಸಿದ್ದರು.