ಮಂಡ್ಯ : ಕರ್ನಾಟಕ ಸಂಘದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜೂನ್ 30ರಂದು ನಗರದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊಫೆಸರ್ ಜಯಪ್ರಕಾಶ ಗೌಡ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು ಪ್ರಶಸ್ತಿಗೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. ಒಡೆಯರ್ ಅವರು ಮೈಸೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದಾರೆ .ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯನ್ನು ಸ್ಥಾಪಿಸಿ ಆ ಸಂಸ್ಥೆಗೆ ದತ್ತಿ ನೀಡಿದ್ದಾರೆ ಎಂದರು.
ನಾಡು ನುಡಿಗೆ ಕಟಿ ಬದ್ಧರಾಗಬೇಕು ಎನ್ನುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ ದೇಣಿಗೆಯನ್ನು ನೀಡಿದ್ದಾರೆ .ಇವರು ನೀರಾವರಿ, ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿಶಿಷ್ಟವಾಗಿ ಕೊಡುಗೆ ನೀಡಿದ್ದು ,ಹಾಗಾಗಿ ಗಾಂಧೀಜಿ ಅವರು ಒಡೆಯರ್ ಅವರನ್ನು ರಾಜರ್ಷಿ ಎಂದು ಕರೆದಿದ್ದಾರೆ ಎಂದರು .
ಕರ್ನಾಟಕ ಸರ್ಕಾರ ಇದುವರೆಗೂ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿಲ್ಲ .ಆದ ಕಾರಣ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು .ನಾಲ್ವಡಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಸಾಂಸ್ಕೃತಿಕ ನೆಲಗಟ್ಟಿಗೆ ಬೇಕಾದ ರಂಗಮಂದಿರವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು .
ಅಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಜಿ ಅವರ ದಿವ್ಯ ಸಾನಿಧ್ಯ ,ಕೊಮ್ಮೆರಹಳ್ಳಿ ವಿಶ್ವ ಮಾನವ ಕ್ಷೇತ್ರದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಲಿರುವ ಸಮಾರಂಭವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು ,ಶಾಸಕ ರವಿಕುಮಾರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ನಾದಬ್ರಹ್ಮ,ದೇಸಿ ಶಿಕ್ಷಣ ಚಿಂತಕ, ಖ್ಯಾತ ಸಂಗೀತ ನಿರ್ದೇಶಕ ಡಾಕ್ಟರ್ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಚಿವ ಸಿ ಎಸ್ ಪುಟ್ಟರಾಜು ನಾಲ್ವಡಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ. ಬೆಂಗಳೂರು ಕೇಂದ್ರ ವಲಯದ ಐಜಿ ಡಾಕ್ಟರ್ ಬಿ ಆರ್ ರವಿ ಕಾಂತೇಗೌಡ ಅವರು ನಾಲ್ವಡಿ ಅವರನ್ನು ಕುರಿತು ಮಾತನಾಡಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ ಶ್ರೀನಿವಾಸ್ ,ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ,ಮಾಜಿ ವಿಧಾನ ಪರಿಷತ್ ಸದಸ್ಯ ಕೆ ಟಿ ಶ್ರೀಕಂಠೇಗೌಡ ಭಾಗವಹಿಸಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು .
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮಂಜುಳಾ ಉದಯಶಂಕರ್ ,ನಾಗಪ್ಪ ಭಾಗವಹಿಸಿದ್ದರು.