ಮಂಡ್ಯ :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟ ಗಿರಿಯಯ್ಯ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮೂಡ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ,ರಾಜ್ಯಪಾಲರು ಹಾಗೂ ನ್ಯಾಯಾಲಯಕ್ಕೆ ಗೌರವ ನೀಡದೆ ಪ್ರಜಾಪ್ರಭುತ್ವ ಅಧಪತನದ ದಾರಿ ಹಿಡಿದಿದೆ ಎಂದು ದೂರಿದರು. ಪ್ರಜಾಪ್ರಭುತ್ವದ ಮೌಲ್ಯ, ಸಂವಿಧಾನದ ಗೌರವ ಉಳಿಯಬೇಕು ಎಂದರೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ತಾಕೀತು ಮಾಡಿದರು.
ಮೂಡ ಹಗರಣದಲ್ಲಿ ವಿರೋಧ ಪಕ್ಷದ ಟೀಕೆಯನ್ನು ಆರೋಗ್ಯಕರವಾಗಿ ಸ್ವೀಕರಿಸದಿರುವ ಸರ್ಕಾರಕ್ಕೆ ರಾಜ್ಯಪಾಲರು ಪ್ರಾಸೀಕ್ಯೂಷನ್ ಗೆ ಸಮ್ಮತಿ ನೀಡಿದಾಗಲೂ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಬದಲಾಗಿ ರಾಜ್ಯಪಾಲರನ್ನೇ ಧಿಕ್ಕರಿಸಿ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಮತ್ತು ಸಂವಿಧಾನಕ್ಕೆ ಅಗೌರವ ತೋರಿದ್ದಾರೆ ಎಂದು ಖಂಡಿಸಿದರು.
ಭಾರತ ಸಂವಿಧಾನ ಮತ್ತು ಪ್ರಜಾತಂತ್ರ ಮೌಲ್ಯದ ಬಗ್ಗೆ ಪುಂ ಕಾನು ಪುಂಕವಾಗಿ ಮಾತನಾಡುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯಮಂತ್ರಿಯೊಬ್ಬರು, ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪುಗಳಿಗೂ ಉದ್ಧಟತನ ತೋರುತ್ತಿರುವುದು ಖಂಡನೀಯ ಎಂದರು
ಭ್ರಷ್ಟಾಚಾರವನ್ನು ಹತ್ತಿಕ್ಕ ಬೇಕಾದ ಮುಖ್ಯಮಂತ್ರಿಗಳೇ ಈಗ ಹಗರಣದಲ್ಲಿ ಸಿಲುಕಿದ್ದಾರೆ. ಆದಕಾರಣ ನಿಷ್ಪಕ್ಷಪಾತ ತನಿಖೆ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗಿಯ ಸಂಚಾಲಕ ಕೆಎಂ ಅನಿಲ್ ಕುಮಾರ್, ಜಿಲ್ಲಾಧ್ಯಕ್ಷ ಬಿ ಆನಂದ್, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಮಹದೇವು ,ಪುಟ್ಟಸ್ವಾಮಿ ,ಆನಂದ ಉಪಸ್ಥಿತರಿದ್ದರು.