ಬೆಂಗಳೂರು:ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು
ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸಿರುವ ಅವರು ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ಸಭೆಯ ಪ್ರಮುಖ ಅಂಶಗಳು:
* ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು.
* ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.
* ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.
– ಇಂದು ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ.