ಮೆರವಣಿಗೆಯತ್ತ ಲಾರಿ ನುಗ್ಗಿ 8 ಸಾವು
ಗಣೇಶಮೂರ್ತಿ ವಿಸರ್ಜನೆ ವೇಳೆ ಅವಘಡ: 25ಕ್ಕೂ ಹೆಚ್ಚು ಜನರಿಗೆ ಗಾಯ
ಮೆರವಣಿಗೆ ಮೇಲೆ ಹರಿದ ಕ್ಯಾಂಟರ್
ಹಾಸನ: ಸೆ.೧೨.ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿದ್ದು, 8 ಮಂದಿ ಮೃತ ಪಟ್ಟಿದ್ದಾರೆ.
‘25ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ‘ಮೃತರ ಸಂಖ್ಯೆ ಹೆಚ್ಚಾಗಬಹುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಮೆರವಣಿಗೆ ಸಾಗುತ್ತಿರುವಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್‌ಗೆ ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿದ ಕ್ಯಾಂಟರ್, ಮೆರವಣಿಗೆ ಮೇಲೆ ಎರಗಿ ಅಪಘಾತವಾಗಿದೆ.
ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಅಪಘಾತದಿಂದಾಗಿ ಸ್ಥಳದಲ್ಲಿ ಗೊಂದಲ ಏರ್ಪಟ್ಟಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ‌್ ಮಾತನಾಡಿ, ‘ಇದೊಂದು ದುರದೃಷ್ಟಕರ ಘಟನೆ. ನಡೆಯಬಾರದಿತ್ತು. ಸೂಕ್ತ ತನಿಖೆಯ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದರು.
ಸ್ಥಳಕ್ಕೆ ಶಾಸಕ ಎಚ್.ಡಿ. ರೇವಣ್ಣ ಭೇಟಿ ನೀಡಿ ಪರಿಶೀಲಿಸಿದರು.
₹5 ಲಕ್ಷ ಪರಿಹಾರ: ಮೃತರ ಕುಟುಂಬ ಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಪ್ರಕಟಿಸಿ ದ್ದಾರೆ. ‘ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ, ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದಾರೆ. ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.