Friday, November 20, 2026
spot_img

ಮಂಡ್ಯದಲ್ಲಿ ಜಯದೇವ ಹೃದ್ರೋಗ ಕೇಂದ್ರ:ಸ್ಥಳ ಪರೀಶೀಲಿಸಿದ ಅಧಿಕಾರಿಗಳು

**ಮಂಡ್ಯದಲ್ಲಿ 5 ಎಕರೆ ಜಾಗ ಪರಿಶೀಲಿಸಿದ ಜಯದೇವ ಸಂಸ್ಥೆ ನಿರ್ದೇಶಕ ಡಾ. ದಿನೇಶ್**

*ಗೋಲ್ಡನ್ ಅವರ್‌ನಲ್ಲೇ ಹೃದ್ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸುವುದು ಮುಖ್ಯ ಉದ್ದೇಶ*

ಮಂಡ್ಯ, ನ.20: ಜಿಲ್ಲೆಯ ಜನರಿಗೆ ಗುಣಮಟ್ಟದ ಹೃದ್ರೋಗ ಚಿಕಿತ್ಸೆಯನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ, ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಘಟಕವನ್ನು ಮಂಡ್ಯದಲ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ನಿರ್ದೇಶಕ ಡಾ. ದಿನೇಶ್ ಅವರು ಇಂದು ಮಂಡ್ಯಕ್ಕೆ ಭೇಟಿ ನೀಡಿ, ಆಸ್ಪತ್ರೆ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳವನ್ನು ಪರಿಶೀಲಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಹಾಗೂ ಮಂಡ್ಯ ಶಾಸಕ ಪಿ. ರವಿಕುಮಾರ್ ಅವರ ನಿರ್ದೇಶನದ ಮೇರೆಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

“ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ಸರ್ಕಾರದ ಆಶಯದಂತೆ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನು ಪರಿಶೀಲಿಸಿದ್ದು, ಆಸ್ಪತ್ರೆ ಸ್ಥಾಪನೆಗೆ ಸೂಕ್ತವಾಗಿದೆ. ಈ ಕುರಿತ ನೀಲನಕ್ಷೆಯನ್ನು ಮೂರು-ನಾಲ್ಕು ವಾರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು” ಎಂದರು.

“ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ರೋಗಿಗೆ ತಕ್ಷಣ ಚಿಕಿತ್ಸೆ ದೊರೆಯುವುದು ಅತ್ಯಂತ ಮುಖ್ಯ. ಹೃದ್ರೋಗಿಗಳು ಮೈಸೂರು ಅಥವಾ ಬೆಂಗಳೂರಿಗೆ ತೆರಳುವ ಅನಿವಾರ್ಯತೆಯನ್ನು ತಪ್ಪಿಸಿ, ಮಂಡ್ಯದಲ್ಲೇ ತುರ್ತು ಚಿಕಿತ್ಸೆ ಒದಗಿಸುವುದು ನಮ್ಮ ಪ್ರಮುಖ ಉದ್ದೇಶ. ಹೃದಯಾಘಾತವಾದ ಮೊದಲ 45 ನಿಮಿಷಗಳ ‘ಗೋಲ್ಡನ್ ಅವರ್’ ಅವಧಿಯಲ್ಲಿ ಸೂಕ್ತ ಚಿಕಿತ್ಸೆ ದೊರೆತರೆ ಅಮೂಲ್ಯ ಜೀವಗಳನ್ನು ಉಳಿಸಬಹುದು” ಎಂದು ಹೇಳಿದರು.

ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕನಿಷ್ಠ 5 ಎಕರೆ ಜಾಗದ ಅಗತ್ಯವಿದ್ದು, ಜಾಗ ಲಭ್ಯವಾದರೆ 250 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಉದ್ದೇಶವಿದೆ. ತೀವ್ರ ನಿಗಾ ಘಟಕ (ಐಸಿಯು), ಹೃದ್ರೋಗ ತೀವ್ರ ನಿಗಾ ಘಟಕ (ಎಂಐಸಿಯು), ಕ್ಯಾತ್ ಲ್ಯಾಬ್ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಗಳ (ಒಟಿ) ಸಂಕೀರ್ಣ ಸೇರಿದಂತೆ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಯೋಜನೆ ಅನುಷ್ಠಾನಕ್ಕೆ ಶಾಸಕ ರವಿಕುಮಾರ್ ಸಹಕಾರ ನೀಡುತ್ತಿದ್ದಾರೆ. ಸರ್ಕಾರದ ಮಾರ್ಗದರ್ಶನ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಜಿಲ್ಲೆಯ ಜನರಿಗೆ ಉತ್ತಮ ಹೃದ್ರೋಗ ಚಿಕಿತ್ಸೆ ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಇಒ ನಾಗರಾಜು ಪ್ರಭಾಕರ್, ಮೋಹನ್ ರಾಜ್, ಮಂಡ್ಯ ಮಿಮ್ಸ್ ನಿರ್ದೇಶಕ ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!