*ಸರ್ಕಾರದ ನಿಯಮಾವಳಿಗಳ ಪ್ರಕಾರ 174 ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆಗೆ ಆದ್ಯತೆ ನೀಡಿ: ಶಾಸಕ ಪಿ. ರವಿಕುಮಾರ್ ಗೌಡ*
*
**ಮಂಡ್ಯ, ನ.18:** ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ ನಿಯಮಾವಳಿಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪಿ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ನಗರಸಭೆ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
174 ಮಳಿಗೆಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸರ್ಕಾರದ ನಿಯಮಾವಳಿಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಮಳಿಗೆ ಹಂಚಿಕೆಗೆ ಸೂಕ್ತ ಮಾರ್ಗ ಕಂಡುಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.
ಜೀವನ ಕಟ್ಟಿಕೊಂಡಿರುವ 174 ವ್ಯಾಪಾರಸ್ಥರಿಗೆ ಮಳಿಗೆಗಳು ದೊರೆಯಬೇಕು. ಅವರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನ್ಯಾಯಯುತವಾಗಿ ಹಂಚಿಕೆ ಪ್ರಕ್ರಿಯೆ ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.
**ಕಾನೂನು ಚೌಕಟ್ಟಿನಡಿ ಹಂಚಿಕೆಗೆ ಕ್ರಮ: ಜಿಲ್ಲಾಧಿಕಾರಿ**
*ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು* ಮಳಿಗೆಗಳ ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರದ ನಿಯಮಾವಳಿ ಹಾಗೂ ಕಾನೂನು ಚೌಕಟ್ಟಿನಡಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಳಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕಾನೂನು ಮತ್ತು ನಿಯಮಗಳು ಏನು ಹೇಳುತ್ತವೆ ಎಂಬುದನ್ನು ಸಭೆಯಲ್ಲಿ ವಿವರಿಸಲಾಗಿದ್ದು, ಸರ್ಕಾರದ ಆದೇಶ ಹಾಗೂ ನಿಯಮಗಳಿಗೆ ಒಳಪಟ್ಟು 174 ಮಳಿಗೆಗಳ ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದರು.
ಎಲ್ಲಾ ನಿಯಮಾವಳಿಗಳನ್ನು ಸಮಗ್ರವಾಗಿ ಪರಿಶೀಲಿಸಿ, ಕಾನೂನಿನಲ್ಲಿರುವ ಅವಕಾಶಗಳನ್ನು ಗುರುತಿಸಿ, ಸಂಬಂಧಪಟ್ಟ ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಚಂದ್ರಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು, ನಗರಸಭೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.


