ಪಾಂಡವಪುರ:ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಪಟ್ಟಣದ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಬಳಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದ ಚಂದ್ರಶೇಖರ್ ಅವರ ಪುತ್ರ ನವೀನ್ ಕುಮಾರ್ ಹಾಗೂ ಮೈಸೂರೂ ತಾಲ್ಲೂಕಿನ ಡಿ.ಸಾಲುಂಡಿ ಗ್ರಾಮದ ಲೇ.ಚಿಕ್ಕಬಸವಚಾರಿ ಪುತ್ರ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಹೆಣ್ಣು ಭ್ರೂಣ ಹತ್ಯೆಗೆ ಸಹಕರಿಸುತ್ತಿದ್ದ ಅವರನ್ನು ಮಂಡ್ಯ ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ಬಂಧಿಸಲಾಗಿದೆ. ಮತ್ತೊರ್ವ ಆರೋಪಿ ಕುಮಾರ ಅವರನ್ನು ಸ್ವಗ್ರಾಮ ಡಿ.ಸಾಲುಂಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೀನ್ ಕುಮಾರ್ ವೃತ್ತಿಯಲ್ಲಿ ಚಾಲಕನಾಗಿದ್ದು, ಭ್ರೂಣ ಪತ್ತೆ ಹಾಗೂ ಗರ್ಭಪಾತ ಮಾಡಿಸಿಕೊಳ್ಳುವವರನ್ನು ವಾಹನದಲ್ಲಿ ಕರೆದೊಯುತ್ತಿದ್ದ ಎನ್ನಲಾಗಿದ್ದು, ಮತ್ತೊಬ್ಬ ಬಂಧಿತ ಕುಮಾರ್ ವೃತ್ತಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದು ಮಾಹಿತಿದಾರನಾಗಿದ್ದ ಎನ್ನಲಾಗಿದೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಹಿಂದೆ ದೊಡ್ಡ ಜಾಲವೇ ಇದೆ ಎಂದು ಹೇಳಲಾಗುತ್ತಿದ್ದು, ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.